ಉಡುಪಿ: ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಮೇಲೆ ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣದ ಮುಖ್ಯ ಆರೋಪಿ, ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಸೋಮವಾರ (ಆ. 24) ಮುಂಜಾನೆ ಹೆಬ್ರಿ ಬಳಿ ಆರೋಪಿಯನ್ನು ಕರೆದೊಯ್ಯುತ್ತಿದ್ದಾಗ, ಆತ ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೋರಿದ್ದಾನೆ. ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿದ್ದಾರೆ. ಗಾಯಗೊಂಡ ಆರೋಪಿಯನ್ನು ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಧಿತ ಅನುಜ್ ಪಾಟೀಲ್ 2017ರಿಂದ ಕಾನೂನಿನ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದು, ಮುಂಬೈನಲ್ಲಿ ಅಂಡರ್‌ವರ್ಲ್ಡ್ ಚಟುವಟಿಕೆಗಳನ್ನು ನಡೆಸುತ್ತಿದ್ದ. ಈತನ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ತಡೆ ಕಾಯ್ದೆ (MCOCA) ಸೇರಿದಂತೆ ಮಹಾರಾಷ್ಟ್ರ, ಗುಜರಾತ್, ದಮನ್-ದಿಯು ಹಾಗೂ ಕರ್ನಾಟಕದಲ್ಲಿ ಒಟ್ಟು 11 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಕರಣದ ತನಿಖೆ ಮುಂದುವರಿದಿದೆ.


