ಉಡುಪಿ: ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕುಸ್ತಿಗೆ ಕಾರಣವಾಗಿದ್ದ ಉಡುಪಿಯ ಬಡಗಬೆಟ್ಟು ಕಂಬಳ ಶಂಕುಸ್ಥಾಪನೆ ವಿಚಾರದಲ್ಲಿ ಜನಪ್ರತಿನಿಧಿಗಳ ಮೇಲೆ ನಿಷೇದಾಜ್ಞೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ಉಡುಪಿ ಕಂಬಳಕ್ಕೆ ಇಂದು ಶಂಕುಸ್ಥಾಪನೆ ನಡೆಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದ್ದರೂ ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ನೇತೃತ್ವದಲ್ಲಿ ಶಂಕು ಸ್ಥಾಪನೆ ನಡೆದಿತ್ತು.
80 ಬಡಗುಬೆಟ್ಟು ಗ್ರಾಮದಲ್ಲಿ ಶಂಕುಸ್ಥಾಪನೆ ನಡೆದಿದ್ದು, ತಹಶೀಲ್ದಾರ್ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘನೆ ಆರೋಪದ ಮೇಲೆ ಮಣಿಪಾಲ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮತ್ತು
ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧವು ಪ್ರಕರಣ ದಾಖಲಾಗಿದೆ.
ಜನಪ್ರತಿನಿಧಿಗಳು ಸೇರಿದಂತೆ ಒಟ್ಟು 38 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಂಕುಸ್ಥಾಪನೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಶಂಕುಸ್ಥಾಪನೆ ಮಾಡಿಸುವಂತೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗ್ರಹಿಸಿದ್ದರು.


