ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್ನಿಂದ ಇಂಧನ ಕಳವು ಮಾಡುತ್ತಿದ್ದ ಮಂಡ್ಯ ಮೂಲದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ರೌಂಡ್ಸ್ ವೇಳೆ ಬಂಧಿಸಿದ್ದಾರೆ.
ಮಂಡ್ಯ ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಹಾಗೂ ಮುತ್ತು (28) ಬಂಧಿತ ಆರೋಪಿಗಳು. ಸೆಪ್ಟೆಂಬರ್ 3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ 516 ಮತ್ತು ಕಾನ್ಸ್ಟೇಬಲ್ ರವಿರಾಜ್ (453) ಅವರು ಬೈಕ್ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಅಲಂಪಾಡಿ ಕ್ರಾಸ್ ಬಳಿ ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್ ಪಕ್ಕದಲ್ಲಿ ಬೊಲೆರೋ ಪಿಕ್ಅಪ್ ವಾಹನವಿಟ್ಟು ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಡೀಸೆಲ್ ಕಳ್ಳತನ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಕ್ಯಾನ್ನಲ್ಲಿ ತುಂಬಿಸಲಾಗಿದ್ದ 20 ಲೀಟರ್ ಡೀಸೆಲ್, ಖಾಲಿ ಕ್ಯಾನ್ಗಳು, ಇಂಧನ ಕಳವಿಗೆ ಬಳಸಿದ್ದ ರಬ್ಬರ್ ಪೈಪ್ ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ಪಿಕ್ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


