
ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಲಾರಿಗಳ ಬ್ಯಾಟರಿಗಳನ್ನು ಸರಣಿಯಾಗಿ ಕಳ್ಳತನ ಮಾಡುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಅಂತರರಾಜ್ಯ ಕಳ್ಳರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಸರಗೋಡಿನ ಚರ್ಕಳ ನಿವಾಸಿ ಅಬ್ದುಲ್ ಶಮೀರ್ P. A. (50) ಹಾಗೂ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33) ಬಂಧಿತ ಆರೋಪಿಗಳಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿ ಕಳ್ಳತನದ ಬಗ್ಗೆ ಸರಣಿಯಾಗಿ ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ತನಿಖೆಯನ್ನು ತೀವ್ರಗೊಳಿಸಿದ ವಿಟ್ಲ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಲಾಗಿದ್ದ ಸುಮಾರು 10 ಬೆಲೆಬಾಳುವ ಲಾರಿ ಬ್ಯಾಟರಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬ್ಯಾಟರಿ ಕಳ್ಳತನಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಬಂಧಿತ ಆರೋಪಿಗಳನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ವಿಟ್ಲ ಪೊಲೀಸರ ಈ ಸಮಯೋಚಿತ ಕಾರ್ಯಾಚರಣೆಯಿಂದ ಲಾರಿ ಚಾಲಕರು ಮತ್ತು ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ.


